ಕಾರವಾರ: ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ನಡೆಯುತ್ತಿರುವಾಗಲೇ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ. ಬುಧವಾರ ಮುಂಜಾನೆ ಇಡಿ ಅಧಿಕಾರಿಗಳ ತಂಡವು ಶಾಸಕರ ಕಾರವಾರದ ಚಿತ್ತಾಕುಲದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿದೆ.
ಖಾಸಗಿ ಕಾರುಗಳಲ್ಲಿ ಆಗಮಿಸಿದ ಇಡಿ ಅಧಿಕಾರಿಗಳು ಶಾಸಕರ ನಿವಾಸವನ್ನು ಸುತ್ತುವರಿದು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿ ಸಮಯದಲ್ಲಿ ಶಾಸಕ ಸತೀಶ್ ಸೈಲ್ ಅವರು ಬೆಂಗಳೂರಿನಲ್ಲಿ ಅಧಿವೇಶನದಲ್ಲಿ ಭಾಗವಹಿಸಿದ್ದ ಕಾರಣ ಮನೆಯಲ್ಲಿ ಇರಲಿಲ್ಲ ಎಂದು ಮೂಲಗಳು ತಿಳಿಸಿವೆ. ಅಧಿಕಾರಿಗಳು ಮನೆಯಲ್ಲಿದ್ದ ನೌಕರರನ್ನು ಪ್ರಶ್ನಿಸುತ್ತಿದ್ದಾರೆ ಮತ್ತು ಮನೆಯನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.
ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಮೂಲಕ ಅಕ್ರಮ ಅದಿರು ಸಾಗಾಟ ಮಾಡಿದ್ದ ಪ್ರಕರಣದಲ್ಲಿ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ದೆ ಅವರ ತಂಡ ಸೈಲ್ ವಿರುದ್ಧ ದೂರು ದಾಖಲಿಸಿತ್ತು. ಸತೀಶ್ ಸೈಲ್‌ಗೆ ಜನಪ್ರತಿನಿಧಿಗಳ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿತ್ತು. ನಂತರ ಅವರು ಹೈಕೋರ್ಟ್ನಲ್ಲಿ ಜಾಮೀನು ಪಡೆದುಕೊಂಡಿದ್ದರು.
ಬೇಲೆಕೇರಿ ಬಂದರಿನಿಂದ ಅದಿರನ್ನು ಅಕ್ರಮವಾಗಿ ವಿದೇಶಕ್ಕೆ ಸಾಗಾಟ ಮಾಡಿದ ಪ್ರಕರಣದಲ್ಲಿ ಸತೀಶ್ ಸೈಲ್ ಅವರನ್ನು ದೋಷಿ ಎಂದು ಕಳೆದ ವರ್ಷ ಅಕ್ಟೋಬರ್ನಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ನಂತರ ಬೇಲೆಕೇರಿ ಅದಿರು ಸಾಗಾಟ ಪ್ರಕರಣ ಸಂಬಂಧಿತ 6 ಪ್ರಕರಣಗಳಲ್ಲಿ ಅವರಿಗೆ 7 ವರ್ಷ ಜೈಲು ಶಿಕ್ಷೆ ಹಾಗೂ 44 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಲಾಗಿತ್ತು. ಆನಂತರ ಜೈಲು ಪಾಲಾಗಿದ್ದ ಅವರು ಶಾಸಕ ಸ್ಥಾನದಿಂದ ಅನರ್ಹರಾಗುವ ಭೀತಿ ಎದುರಿಸುತ್ತಿದ್ದರು..