ಹೊನ್ನಾವರ: ಹೊನ್ನಾವರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಹಸುವೊಂದನ್ನು ಕಳ್ಳತನ ಮಾಡಲು ಪ್ರಯತ್ನಿಸಿದ ಇಬ್ಬರು ಆರೋಪಿಗಳನ್ನು ಹೊನ್ನಾವರ ಪೊಲೀಸರು ಬಂಧಿಸಿದ್ದಾರೆ. ಭಟ್ಕಳ ಮತ್ತು ಉಡುಪಿ ಜಿಲ್ಲೆಗಳ ನಿವಾಸಿಗಳಾದ ಮೊಹಮ್ಮದ್ ಜಾಫರ್ ಜಕ್ವಾನ್ ಮತ್ತು ಸಬೀಲ್ ಬೆಟ್ಟಿ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.
ದಿನಾಂಕ: 04-09-2025 ರಂದು ಮಧ್ಯರಾತ್ರಿ 12:10 ರಿಂದ ಬೆಳಗ್ಗೆ 6:00 ಗಂಟೆಯ ನಡುವಿನ ಅವಧಿಯಲ್ಲಿ ಅಪರಿಚಿತರು ಕಾರಿನಲ್ಲಿ ಬಂದು ರಸ್ತೆಯ ಬದಿಯಲ್ಲಿ ಮಲಗಿದ್ದ ಹಸುವನ್ನು ಕದಿಯಲು ಪ್ರಯತ್ನಿಸಿದ್ದಾರೆ. ಈ ಘಟನೆ ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಹೊನ್ನಾವರ ಪೊಲೀಸ್ ಠಾಣೆಯ ಸಿ.ಪಿ.ಸಿ. ರವಿ ಎಚ್. ನಾಯ್ಕ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ಆರಂಭಿಸಿದ್ದರು.
ಪ್ರಕರಣದ ತನಿಖೆಗಾಗಿ ಪೊಲೀಸರು ವಿಶೇಷ ತಂಡವನ್ನು ರಚಿಸಲಾಗಿತ್ತು. ತಾಂತ್ರಿಕ ಮಾಹಿತಿಯನ್ನು ಆಧರಿಸಿ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ. ಖಚಿತ ಮಾಹಿತಿಯ ಮೇರೆಗೆ, ಆರೋಪಿಗಳಾದ ಮೊಹಮ್ಮದ್ ಜಾಫರ್ (24 ವರ್ಷ, ಭಟ್ಕಳ) ಮತ್ತು ಸಬೀಲ್ ಬೆಟ್ಟಿ (31 ವರ್ಷ, ಉಡುಪಿ) ಅವರನ್ನು ವಶಕ್ಕೆ ಪಡೆಯಲಾಯಿತು. ವಿಚಾರಣೆ ವೇಳೆ ಆರೋಪಿಗಳು ತಮ್ಮ ಕೃತ್ಯವನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳ್ಳತನಕ್ಕೆ ಬಳಸಿದ ₹ 4 ಲಕ್ಷ ಮೌಲ್ಯದ ಮಾರುತಿ ಬ್ರಿಜಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೂ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ಯಶಸ್ವಿ ಕಾರ್ಯಾಚರಣೆಯನ್ನು ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಜಿ. ಕೃಷ್ಣಮೂರ್ತಿ ಮತ್ತು ಎಂ. ಜಗದೀಶ್, ಹಾಗೂ ಭಟ್ಕಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಮಹೇಶ್ ಕೆ. ಅವರ ಮಾರ್ಗದರ್ಶನದಲ್ಲಿ ನಡೆಸಲಾಯಿತು. ಹೊನ್ನಾವರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಿದ್ದರಾಮೇಶ್ವರ ಎಸ್., ಪಿಎಸ್‌ಐ ರಾಜಶೇಖರ ವಂದಲಿ ಮತ್ತು ಸಿಬ್ಬಂದಿ ಗಜಾನನ ನಾಯ್ಕ, ವಿಠಲ ಗೌಡ, ಮನೋಜ್ ಡಿ, ರವಿ ನಾಯ್ಕ, ಚಂದ್ರಶೇಖರ ನಾಯ್ಕ, ಮತ್ತು ತಾಂತ್ರಿಕ ವಿಭಾಗದ ಉದಯ ಗುನಗಾ ಅವರು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.