ಕಾರವಾರ, ಸೆಪ್ಟೆಂಬರ್ 15, 2025: ಭಾರತ ಸಂವಿಧಾನವು ಎಲ್ಲಾ ಪ್ರಜೆಗೂ ಸಮಾನ ಅವಕಾಶಗಳನ್ನು ಕಲ್ಪಿಸಿದ್ದು, ನಾಗರಿಕರು ಇದನ್ನು ಸದುಪಯೋಗಪಡಿಸಿಕೊಂಡು ಉತ್ತಮ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಹೇಳಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
“ಸಂವಿಧಾನವು ಜಾತಿ, ಮತ, ಧರ್ಮ, ಭೇದವಿಲ್ಲದೇ ಸಮಾನತೆ, ಸೌಹಾರ್ದತೆ, ಮತ್ತು ಸಹಿಷ್ಣುತೆಯ ಮೌಲ್ಯಗಳನ್ನು ಒಳಗೊಂಡಿದೆ. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿರುವ ಸಂವಿಧಾನವು ಸಾರ್ವಜನಿಕರಿಗೆ ತಮ್ಮ ಸಮಸ್ಯೆಗಳನ್ನು ಧೈರ್ಯವಾಗಿ ಎತ್ತಿಹಿಡಿಯಲು ಅವಕಾಶ ಕಲ್ಪಿಸಿದೆ. ಗ್ರಾಮ ಪಂಚಾಯತ್‌ಗಳ ಮಕ್ಕಳ ಗ್ರಾಮ ಸಭೆಯಲ್ಲಿ ಮಕ್ಕಳಿಗೂ ಮುಕ್ತವಾಗಿ ಮಾತನಾಡಲು ಅವಕಾಶವಿದೆ. ವಿದ್ಯಾರ್ಥಿಗಳು ಸಂವಿಧಾನದ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ನಾಗರಿಕರಾಗಿ ದೇಶಕ್ಕೆ ಕೊಡುಗೆ ನೀಡಬೇಕು,” ಎಂದು ಜಿಲ್ಲಾಧಿಕಾರಿ ಕರೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ಮಾತನಾಡಿ, “ಪ್ರಜಾಪ್ರಭುತ್ವವು ಸಂವಿಧಾನದ ಆತ್ಮವಿದ್ದಂತೆ. ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಸ್ವಾತಂತ್ರ್ಯ, ಸಮಾನತೆ, ಮತ್ತು ಸಹಭಾಗಿತ್ವದ ತತ್ವಗಳನ್ನು ಒಳಗೊಂಡಿದೆ. ಉತ್ತಮ ಪ್ರಜಾಪ್ರಭುತ್ವಕ್ಕಾಗಿ ಎಲ್ಲರೂ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡಬೇಕು. ಜನರ ಭಾಗವಹಿಸುವಿಕೆಯು ಪ್ರಜಾಪ್ರಭುತ್ವವನ್ನು ಬಲಿಷ್ಠಗೊಳಿಸುತ್ತದೆ,” ಎಂದರು.
ಅಂಕೋಲಾ ಪಿ.ಎಂ. ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಉಲ್ಲಾಸ್ ಶ್ಯಾಮ್ ಹುದ್ಧಾರ, “ಭಾರತದ ಸಂವಿಧಾನವು ವಿಶ್ವದ ಮಾದರಿ ಪ್ರಜಾಪ್ರಭುತ್ವ ವ್ಯವಸ್ಥೆಯಾಗಿದೆ. ಇತರ ರಾಷ್ಟ್ರಗಳಿಗಿಂತ ಭಾರತದಲ್ಲಿ ಸಂವಿಧಾನ ಜಾರಿಯಾದ ದಿನವೇ ಮತದಾನದ ಹಕ್ಕು ದೊರೆತಿದೆ. ಯುವ ಜನತೆ ಇದರ ಮಹತ್ವವನ್ನು ಅರಿತು ಮತದಾನದ ಮೂಲಕ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು,” ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ವೈ.ಕೆ. ಉಮೇಶ್, ಮತ್ತು ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳು, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ಸಂವಿಧಾನ ಪೀಠಿಕೆಯ ಪ್ರತಿಜ್ಞಾ ವಿಧಿ ಸ್ವೀಕಾರ ಮತ್ತು ಪ್ರಜಾಪ್ರಭುತ್ವ ದಿನದ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು.
ಕರ್ನಾಟಕ ಮಕ್ಕಳ ರಕ್ಷಣಾ ನೀತಿ ಸಂಪೂರ್ಣ ಜಾರಿಗೆ ಒತ್ತಾಯ
ಅದೇ ದಿನ, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಕಾರವಾರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ, ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿಯನ್ನು ಜಿಲ್ಲೆಯ ಎಲ್ಲಾ ವಿದ್ಯಾ ಸಂಸ್ಥೆಗಳು, ವಿದ್ಯಾರ್ಥಿನಿಲಯಗಳು, ಕ್ರೀಡಾ ವಸತಿಗೃಹಗಳು, ಮತ್ತು ಸರಕಾರಿ ಕಚೇರಿಗಳಲ್ಲಿ ಸಂಪೂರ್ಣವಾಗಿ ಜಾರಿಗೊಳಿಸಲು ಸೂಚನೆ ನೀಡಿದರು.

“ಮಕ್ಕಳ ರಕ್ಷಣಾ ನೀತಿಯ 20 ಅಂಶಗಳನ್ನು ತಪ್ಪದೇ ಅನುಷ್ಠಾನಗೊಳಿಸಬೇಕು. ಶಾಲಾ ಆವರಣದಲ್ಲಿ ಸಿಸಿಟಿವಿ, ದೂರು ಪೆಟ್ಟಿಗೆ, ಮಕ್ಕಳ ಹಕ್ಕುಗಳ ಜಾಗೃತಿ ಕಾರ್ಯಕ್ರಮಗಳು, ಮತ್ತು ಉಚಿತ ಸಹಾಯವಾಣಿ 1098 ಸಂಖ್ಯೆಯನ್ನು ಶಾಶ್ವತವಾಗಿ ಬರೆಸಬೇಕು. ಎಲ್ಲಾ ಇಲಾಖೆಗಳು ಮಕ್ಕಳಿಗೆ ಸಂಬಂಧಿಸಿದ ಅನುದಾನದ ಬಳಕೆ ಮತ್ತು ಸುರಕ್ಷತಾ ಕ್ರಮಗಳ ಕುರಿತು ವರದಿ ಸಲ್ಲಿಸಬೇಕು,” ಎಂದು ಜಿಲ್ಲಾಧಿಕಾರಿ ಒತ್ತಾಯಿಸಿದರು.
ಗ್ರಾಮಸಭೆಗಳು ಮತ್ತು ಶಾಲಾ ಸಲಹಾ ಪೆಟ್ಟಿಗೆಯ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಿತ ಇಲಾಖೆಗಳು ಸಮಸ್ಯೆಗಳನ್ನು ಇತ್ಯರ್ಥಪಡಿಸಬೇಕು ಎಂದು ಸೂಚಿಸಿದ ಅವರು, “ಜಿಲ್ಲೆಯಲ್ಲಿ ಮಕ್ಕಳ ಸ್ನೇಹಿ ಮತ್ತು ಸುರಕ್ಷಿತ ವಾತಾವರಣ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳು ಕಾರ್ಯನಿರ್ವಹಿಸಬೇಕು,” ಎಂದರು.
ಸಭೆಯಲ್ಲಿ ತರಬೇತಿ ನಿರತ ಐ.ಎ.ಎಸ್. ಜಿಲ್ಲಾಧಿಕಾರಿ ಝೂಫಿಶಾನ್ ಹಕ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅಲ್ಲಾ ಭಕ್ಷ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೃಷ್ಣಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೋನಲ್ ಐಗಳ್, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ. ನಟರಾಜ್, ಡಿವೈಎಸ್ಪಿ ಗಿರೀಶ್, ಮತ್ತು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.