ಕಾರವಾರ, ಸೆಪ್ಟೆಂಬರ್ 02, 2025: ಕಾರವಾರದ ರಾಷ್ಟ್ರೀಯ ಹೆದ್ದಾರಿಯ ಸುರಂಗ ಮಾರ್ಗದಲ್ಲಿ ತಡರಾತ್ರಿ 2:30ರ ಸುಮಾರಿಗೆ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಗೋವಾದಿಂದ ಪುತ್ತೂರಿಗೆ ತೆರಳುತ್ತಿದ್ದ ಅಲ್ಟೋ ಕಾರಿನ ಚಾಲಕ ರಂಜಿತ್ ಕುಮಾರ್ ವಿಶ್ವನಾಥ್ ನಾಯಕ್ (35) ಎದುರಿನ ಕಾರನ್ನು ಓವರ್‌ಟೇಕ್ ಮಾಡಲು ಯತ್ನಿಸುವಾಗ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದ್ದಾರೆ. ಈ ದುರ್ಘಟನೆಯಲ್ಲಿ ರಂಜಿತ್ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತಕ್ಕೀಡಾದ ಇನ್ನೊಂದು ಕಾರಿನಲ್ಲಿ ಚಿಕ್ಕಬಳ್ಳಾಪುರ ಮೂಲದ ವಿವೇಕ್, ಗಿರೀಶ್, ಪವನ್ ಮತ್ತು ಚಾಲಕ ಗಣೇಶ್ ಇದ್ದರು. ಈ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಾರವಾರದ ಕ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಈ ಘಟನೆ ಕಾರವಾರ ಟ್ರಾಫಿಕ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.