ಉಡುಪಿ, ಆಗಸ್ಟ್ 17, 2025: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಕರ್ನಾಟಕದಲ್ಲಿ ಅಂಗನವಾಡಿಗಳ 50 ವರ್ಷಗಳ ಸುವರ್ಣ ಮಹೋತ್ಸವವನ್ನು ಅಕ್ಟೋಬರ್ 2, 2025ರಂದು ಆಚರಿಸಲು ಸಿದ್ಧತೆಗಳು ನಡೆಯುತ್ತಿರುವುದಾಗಿ ತಿಳಿಸಿದರು.
ಉಡುಪಿ ಜಿಲ್ಲಾಡಳಿತ, ಉಡುಪಿ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮತ್ತು ಕಾಪು ತಾಲೂಕು ಪಂಚಾಯತ್‌ನಿಂದ ಯಲ್ಲೂರಿನ ದುರ್ಗಾನಗರದಲ್ಲಿ ನಿರ್ಮಿಸಲಾದ ಹೊಸ ಅಂಗನವಾಡಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಸಚಿವೆ, ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಮತ್ತಷ್ಟು ಬಲಪಡಿಸಲು ಎಲ್‌ಕೆಜಿ ಮತ್ತು ಯುಕೆಜಿಯನ್ನು ಆರಂಭಿಸಲಾಗುವುದು ಎಂದರು.

ರಾಜ್ಯದಲ್ಲಿ 70,000 ಅಂಗನವಾಡಿ ಕೇಂದ್ರಗಳಿದ್ದು, ಇವುಗಳನ್ನು ಹಂತಹಂತವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಎಲ್‌ಕೆಜಿ/ಯುಕೆಜಿಯನ್ನು ಪೂರ್ವ ಪ್ರಾಥಮಿಕ ಹಂತದಲ್ಲಿ ಆರಂಭಿಸುವ ಮೊದಲ ರಾಜ್ಯವಾಗಿ ಕರ್ನಾಟಕ ಹೆಗ್ಗಳಿಕೆ ಪಡೆಯಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಕಾರ್ಯಕ್ರಮದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಎಸಿ ರಶ್ಮಿ, ತಹಶೀಲ್ದಾರ್ ಡಾ. ಪ್ರತಿಭಾ, ತಾಲೂಕು ಸಿಇಒ ಜೇಮ್ಸ್ ಡಿಸಿಲ್ವಾ, ಇಲಾಖೆಯ ಅಧಿಕಾರಿಗಳು ಮತ್ತು ಇತರರು ಉಪಸ್ಥಿತರಿದ್ದರು.